ಯಾದಗಿರಿ: ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನವಿಲ್ಲ. ನೌಕರರ ವೇತನ ಪಾವತಿಗೂ ಹಣದ ಕೊರತೆ ಎದುರಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಸೇರಿದಂತೆ ವಿವಿಧ ಯೋಜನೆಗಳಿಗೂ ಅನುದಾನದ ಅಭಾವವಿದೆ ಎಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಆರೋಪಿಸಿದರು.
ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ, ಚುನಾವಣೆಗೆ ತೆರಳುವ ಮುನ್ನ ಸರ್ಕಾರ ತನ್ನ ಆರ್ಥಿಕ ಪರಿಸ್ಥಿತಿಯನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ಬೆಲೆ ಏರಿಕೆ ಹಾಗೂ ಜನರ ಮೇಲಿನ ಹೆಚ್ಚುತ್ತಿರುವ ಆರ್ಥಿಕ ಹೊರೆ ಮುಂಬರುವ ಚುನಾವಣೆಯಲ್ಲಿ ಜನರ ನಿರ್ಧಾರದ ಮೇಲೆ ಪರಿಣಾಮ ಬೀರುವ ವಿಚಾರಗಳಾಗಿವೆ ಎಂದು ಶರಣಗೌಡ ಕಂದಕೂರ ಹೇಳಿದರು.