ಯಾದಗಿರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 13.57 ಲಕ್ಷ ರೂ. ಸರ್ಕಾರಿ ಹಣ ದುರುಪಯೋಗ ಮಾಡಿಕೊಂಡ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಯಾದಗಿರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.

ಸುರಪುರ ತಾಲೂಕಿನ ಹೇಮನೂರು ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳದೆ, ಎನ್‌ಎಂಆರ್, ಮಾಪನ ಪುಸ್ತಕ (ಎಂ.ಬಿ.) ಹಾಗೂ ನಗದು ಪುಸ್ತಕ ನಿರ್ವಹಿಸದೆ ಸರ್ಕಾರದ ಹಣ ದುರುಪಯೋಗ ಮಾಡಿಕೊಂಡ ಆರೋಪದಡಿ 2013ರ ಜನವರಿ 1ರಂದು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮರುಳಸಿದ್ದಾರಾಧ್ಯ ಅವರು, ಹೇಮನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವನಗೌಡ ನಿಡುಗುಂದಿ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸಿದ್ದಪ್ಪ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿ ನವೆಂಬರ್ 13ರಂದು ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದ ಮೊದಲ ಆರೋಪಿ ಪಿಡಿಒ ಮಾನಪ್ಪ ಕೊಂಗಂಡಿಕರ್ ಹಾಗೂ ನಾಲ್ಕನೇ ಆರೋಪಿ ರಾಜ ರಾಮಪ್ಪ ನಾಯಕ ಮೃತಪಟ್ಟಿದ್ದಾರೆ. ಲೋಕಾಯುಕ್ತ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ವಿಶ್ವನಾಥ ಉಭಾಳೆ ವಾದ ಮಂಡಿಸಿದ್ದರು. ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ರಾಮುನಾಯಕ ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದ್ದರು.