Tag: Crime

  • ನಕಲಿ ಮುಟೇಷನ್ ದಾಖಲೆ ಆರೋಪ: ಡಿಸಿಸಿ ಬ್ಯಾಂಕ್ ನಿರ್ದೇಶಕರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು 

    ನಕಲಿ ಮುಟೇಷನ್ ದಾಖಲೆ ಆರೋಪ: ಡಿಸಿಸಿ ಬ್ಯಾಂಕ್ ನಿರ್ದೇಶಕರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು 

    ಯಾದಗಿರಿ:  ಭೂಮಿಯ ಮಾಲಿಕತ್ವಕ್ಕೆ ಸಂಬಂಧಿಸಿದಂತೆ ನಕಲಿ ಮುಟೇಷನ್ ದಾಖಲೆಗಳನ್ನು ಸೃಷ್ಟಿಸಿ ಮೋಸ ಮಾಡಿದ ಆರೋಪದ ಮೇಲೆ ಡಿಸಿಸಿ ಬ್ಯಾಂಕ್ ನಿರ್ದೇಶಕರು ಸೇರಿ ಮೂವರು ವ್ಯಕ್ತಿಗಳ ವಿರುದ್ಧ ಜಿಲ್ಲೆಯ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ತಿಮ್ಮಾಪುರ ನಿವಾಸಿ ಅಶೋಕ ಅವರು ನೀಡಿದ ದೂರಿನಂತೆ, ವಣಕಿಹಾಳ ಹಾಗೂ ಹಸನಾಪುರ ಗ್ರಾಮಗಳ ವಿವಿಧ ಸರ್ವೆ ಸಂಖ್ಯೆಗಳ ಕುರಿತು ಮುಟೇಷನ್ ನಂ. 28 ಮತ್ತು 30 (05-10-1996)ಗಳ ನಕಲಿ ಪ್ರತಿಗಳನ್ನು ತಯಾರಿಸಿ, ಸರಕಾರಿ ಸೀಲ್–ಮೊಹರುಗಳನ್ನು ದುರುಪಯೋಗಪಡಿಸಿಕೊಂಡು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಕಚೇರಿಗಳಿಗೆ ಸಲ್ಲಿಸಲಾಗಿದೆ ಎಂದು ಆರೋಪಿಸಲಾಗಿದೆ.

    ಜಿಲ್ಲಾಧಿಕಾರಿ ಹಾಗೂ ಸುರಪುರ ತಹಸೀಲ್ದಾರ್ ಕಚೇರಿಗಳಿಂದ ನಡೆದ ಪರಿಶೀಲನೆ, ಅಭಿಲೇಖಾಲಯ ಶಾಖೆಯ ವರದಿಗಳು ಹಾಗೂ ಪಹಣಿ ದಾಖಲೆಗಳ ಪರಿಶೀಲನೆಯಿಂದ ಈ ಮುಟೇಷನ್ ಪ್ರತಿಗಳು ಕೊಟ್ಟಿ (ನಕಲಿ) ದಾಖಲೆಗಳಾಗಿವೆ ಎಂಬುದು ದೃಢಪಟ್ಟಿದೆ ಎಂದು ದೂರಿನಲ್ಲಿ  ಉಲ್ಲೇಖಿಸಲಾಗಿದೆ.

    ಈ ಹಿನ್ನೆಲೆಯಲ್ಲಿ ಬಸವರಾಜ ತಂದೆ ರಾಜಶೇಖರಪ್ಪ ಸಜ್ಜನ್, ಡಿಸಿಸಿ ಬ್ಯಾಂಕ್ ಕಲಬುರಗಿ ನಿರ್ದೇಶಕ ಸುರೇಶ ತಂದೆ ರಾಜಶೇಖರಪ್ಪ ಸಜ್ಜನ್ ಹಾಗೂ ಪ್ರಕಾಶ ತಂದೆ ರಾಜಶೇಖರಪ್ಪ ಸಜ್ಜನ್ ವಿರುದ್ಧ ಐಪಿಸಿ ಕಲಂ. 464, 465, 468, 471 ಮತ್ತು 420 ಅಡಿಯಲ್ಲಿ  ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಪೊಲೀಸ್ ಮೂಲಗಳು ತಿಳಿಸಿವೆ.

  • ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಕಳ್ಳರು

    ಲಕ್ಷಾಂತರ ರೂ ಮೌಲ್ಯದ ಆಭರಣ ದೋಚಿದ ಕಳ್ಳರು

    ಸುರಪುರ: ಪಟ್ಟಣದ ನಗರಸಭೆಯ ಕಿರಿಯ ಅಭಿಯಂತರ ಮಹೇಶ್ ಮಾಳಗಿ ಅವರ ಬೊಂಬಾಯಿ ಬಸಣ್ಣ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ಮಂಗಳವಾರ ರಾತ್ರಿ ನಡೆದಿರುವ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಕುಟುಂಬದವರು ಮನೆಯಿಂದ ಹೊರಗಿದ್ದ ಸಂದರ್ಭ ಮನೆಯ ಬೀಗ ಮುರಿದು ಚಿನ್ನ–ಬೆಳ್ಳಿ ಆಭರಣಗಳು ಹಾಗೂ ನಗದು ಸೇರಿದಂತೆ ಸುಮಾರು ₹46.11 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

    ಮಂಗಳವಾರ ಸಂಜೆ 7.30ರಿಂದ ರಾತ್ರಿ 10.30ರ ನಡುವೆ ಸುರಪುರದ ದೀವಳಗುಡ್ಡದಲ್ಲಿ ಸಹೋದರನ ಪತ್ನಿಯ ಮನೆಯಲ್ಲಿ ದೇವರ ಕಾರ್ಯಕ್ಕೆ ಕುಟುಂಬದವರು ತೆರಳಿದ್ದರು. ಈ ವೇಳೆ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಕಳ್ಳರು ಬೀಗ ಮುರಿದು ಒಳನುಗ್ಗಿದ್ದಾರೆ.

    ಮನೆಯಲ್ಲಿ ಇತ್ತಿದ್ದ 642 ಗ್ರಾಂ ಬಂಗಾರದ ಆಭರಣಗಳು (ಮೌಲ್ಯ ₹44.94 ಲಕ್ಷ), 1295 ಗ್ರಾಂ ಬೆಳ್ಳಿಯ ಆಭರಣಗಳು (₹77,700) ಮತ್ತು ₹40,000 ನಗದು ಸೇರಿ ಒಟ್ಟು ₹46,11,700 ಮೌಲ್ಯದ ವಸ್ತುಗಳು ಕಳುವಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

    ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಬೀಗ ಮುರಿದಿರುವುದು ಕಂಡ ಕುಟುಂಬದವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ಸುರಪುರ ಠಾಣೆಗೆ ಅಧಿಕೃತ ದೂರು ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾದಗಿರಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ್, ಸುರಪುರ ಉಪವಿಭಾಗದ ಪ್ರಭಾರಿ ಡಿವೈಎಸ್ಪಿ ನಾಗರಾಜ, ಪಿಐ ಉಮೇಶ್ ನಾಯಕ್, ಪಿಎಸ್ಐ ಕೃಷ್ಣಾ ಸುಬೇದಾರ, ಸಿದ್ದಣ್ಣ ಯಡ್ರಾಮಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಇದುವರೆಗೆ ಕಳ್ಳರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

  • ಎರಡು ಗುಂಪುಗಳ ನಡುವೆ ಹೊಡೆದಾಟ: 25 ಮಂದಿ ವಿರುದ್ಧ ಪ್ರಕರಣ

    ಎರಡು ಗುಂಪುಗಳ ನಡುವೆ ಹೊಡೆದಾಟ: 25 ಮಂದಿ ವಿರುದ್ಧ ಪ್ರಕರಣ

    ಯಾದಗಿರಿ: ಗಾಂಧಿ ನಗರ ತಾಂಡಾದಲ್ಲಿ ಎರಡು ಗುಂಪುಗಳ ನಡುವೆ ಮಾರಕಾಸ್ತ್ರಗಳು ಹಿಡಿದು ಹೊಡೆದಾಟ ನಡಿಸಿದ ಸಂಬಂಧ ಇಬ್ಬರನ್ನು ಬಂಧಿಸಿ, 25 ಆರೋಪಿಗಳ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೈಯಲ್ಲಿ ತಲ್ವಾರ್, ಚಾಕು, ಕಲ್ಲು, ಇಟ್ಟಿಗೆ, ಕಟ್ಟಿಗೆಗಳನ್ನು ಹಿಡಿದು ಎರಡೂ ಗುಂಪಿನವರು ಪರಸ್ಪರ ಹೊಡೆದಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಎರಡೂ ಕಡೆಯವರು ದೂರು– ಪ್ರತಿದೂರು ದಾಖಲಿಸಿದ್ದಾರೆ. ತೇಜರಾಜ್ ರಾಠೋಡ (46) ಹಾಗೂ ರಮೇಶ ದೇವುಜಿ ರಾಠೋಡನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ರಮೇಶ ದೇವುಜಿ ನೀಡಿದ ದೂರಿನ ಅನ್ವಯ ತೇಜರಾಜ್, ಶಶಿ, ಮೋನು, ಮಿಥುನ್, ಬಾಬು ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶಶಿಕುಮಾರ ತೇಜರಾಜ್ ನೀಡಿದ ಪ್ರತಿ ದೂರಿನ ಪ್ರಕಾರ ರಮೇಶ, ಕಲಾವತಿ, ಲಕ್ಷ್ಮಿಬಾಯಿ, ಅಂಬರೇಶ, ಅರ್ಜುನ್ ಸೇರಿ 14 ಮಂದಿ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.